ಕೂಡಿಗೆ : "ಪ್ರಜಾಪ್ರಭುತ್ವದ ಆಶಯ, ಸಂಸದೀಯ ಕಾರ್ಯವಿಧಾನ ಮತ್ತು ಜನಪ್ರತಿನಿಧಿಗಳ ಜವಾಬ್ದಾರಿಯನ್ನು ಯುವಜನರು ಅರಿಯಲು ಇಂತಹ ಕಾರ್ಯಕ್ರಮಗಳು ನೆರವಾಗುತ್ತವೆ" ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು. ಚಿಕ್ಕಅಳುವಾರದಲ್ಲಿರುವ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಗುರುವಾರ ನಡೆದ 2026ನೇ ಸಾಲಿನ ಯುವಸಂಸತ್ತು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾಯಕತ್ವ ಗುಣ, ಸಂವಹನ ಕೌಶಲ, ಆತ್ಮವಿಶ್ವಾಸ ಹಾಗೂ ಸಾಮಾಜಿಕ-ರಾಜಕೀಯ ಜವಾಬ್ದಾರಿ ಬೆಳೆಸಲು ಇಂತಹ ಕಾರ್ಯಕ್ರಮಗಳು ಪೂರಕ ಎಂದ ಅವರು, ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮೌಲ್ಯ, ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದೇ ಕಾರ್ಯಕ್ರಮದ ಉದ್ದೇಶ ಎಂದು ಹೇಳಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ, ಉನ್ನತ ಶಿಕ್ಷಣ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳು ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಯುವಸಂಸತ್ತಿನಲ್ಲಿ ವಿದ್ಯಾರ್ಥಿಗಳು ಸಂಸದೀಯ ಕಲಾಪದ ಮಾದರಿಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಪ್ರಶ್ನೋತ್ತರ, ಚರ್ಚೆ, ವಿಚಾರ ಮಂಡನೆ ಮತ್ತು ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಗಳ ಮೂಲಕ ಸಂಸದೀಯ ಪ್ರಜಾಪ್ರಭುತ್ವದ ಕಾರ್ಯವೈಖರಿಯನ್ನು ಅರಿತುಕೊಂಡರು. ಪತ್ರಕರ್ತ ಚಂದ್ರಮೋಹನ್, ಪ್ರಾಧ್ಯಾಪಕಿ ಡಾ. ನಿರ್ಮಲ ಮತ್ತು ವಕೀಲ ಯತೀಶ್ ತೀರ್ಪುಗಾರರಾಗಿದ್ದರು. ವಿಷಯ ಮಂಡನೆ, ಸಂಸದೀಯ ನಡವಳಿಕೆ, ವಿಷಯದ ಅರಿವು, ಭಾಷಾ ಬಳಕೆ, ಸಮಯಪಾಲನೆ ಮತ್ತು ಚರ್ಚೆಯಲ್ಲಿ ಪಾಲ್ಗೊಂಡ ರೀತಿಯ ಆಧಾರದ ಮೇಲೆ ಮೌಲ್ಯಮಾಪನ ನಡೆಯಿತು. ಸ್ಪರ್ಧೆಯಲ್ಲಿ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಲೋಹಿತ್ ಪ್ರಥಮ ಸ್ಥಾನ ಪಡೆದರು. ಕೊಡಗು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮೋಹನ್ ಹೆಚ್.ಎಂ. ದ್ವಿತೀಯ ಸ್ಥಾನ ಗಳಿಸಿದರು. ಸೋಮವಾರಪೇಟೆ ಸೆಂಟ್ ಜೋಸೆಫ್ ಪ್ರಥಮ ದರ್ಜೆ ಕಾಲೇಜಿನ ಮೋಹನ್ ಮತ್ತು ಜ್ಞಾನ ಕಾವೇರಿ ಆವರಣದ ಕನ್ನಡ ವಿಭಾಗದ ಪ್ರೀತ ಸಿ. ಅವರು ಜಂಟಿಯಾಗಿ ತೃತೀಯ ಸ್ಥಾನ ಪಡೆದುಕೊಂಡರು. ಜಿಲ್ಲಾಮಟ್ಟದ ಸ್ಪರ್ಧೆಗೂ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು. ಈ ಸಂದರ್ಭ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ. ಸುರೇಶ್ ಎಂ., ತಾಲೂಕು ಯುವಸಂಸತ್ತು ಸಮಿತಿಯ ಸಂಚಾಲಕ ಹಾಗೂ ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ, ಕಾರ್ಯದರ್ಶಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಎಂ., ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ತಾಲೂಕು ವಕೀಲರ ಸಂಘದ ಅಧ್ಯಕ್ಷರು ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ವಿಶ್ವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ, ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಮಾಧ್ಯಮದವರು ಹಾಗೂ ಪೋಷಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಆರ್ಸಿ ಮಂಜೇಶ್ ನಿರೂಪಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ಜಮೀರ್ ಅಹ್ಮದ್ ಸ್ವಾಗತಿಸಿದರು.


ಕಾಮೆಂಟ್ಗಳು (0)